Add parallel Print Page Options

ನಂಬಿಗಸ್ತನಾದ ಆಳು ಯಾರು?

41 ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.

42 ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ. 43 ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು. 44 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.

45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು. 46 ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.

47 “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು! 48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”

Read full chapter