Add parallel Print Page Options

ಯೆಹೂದ್ಯಳಲ್ಲದ ಸ್ತ್ರೀಗೆ ಯೇಸು ಮಾಡಿದ ಸಹಾಯ

(ಮಾರ್ಕ 7:24-30)

21 ಯೇಸು ಆ ಸ್ಥಳವನ್ನು ಬಿಟ್ಟು, ಟೈರ್ ಮತ್ತು ಸೀದೋನ್‌ಗಳ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. 22 ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.

23 ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.

24 ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.

25 ಆಗ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನನಗೆ ಸಹಾಯ ಮಾಡು” ಎಂದು ಕೇಳಿದಳು.

26 ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.

27 ಆ ಸ್ತ್ರೀಯು, “ಹೌದು ಪ್ರಭುವೇ, ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ಆಹಾರದ ತುಂಡುಗಳನ್ನು ತಿನ್ನುತ್ತವೆಯಲ್ಲಾ” ಎಂದಳು.

28 ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.

Read full chapter